ಮಂಗಳೂರು, ಹುಬ್ಬಳ್ಳಿ, ಗೋವಾ ಸೇರಿ 23 ಕಡೆ ಐಟಿ ರೇಡ್‌‌‌… 125 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ

0
183

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು: ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳು ಐದು ರಾಜ್ಯಗಳ 23 ಸ್ಥಳಗಳಲ್ಲಿನ ಮೀನು ಸಂಸ್ಕರಣಾ ಘಟಕಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಈ ದಾಳಿ ನಡೆದಿದ್ದು, 125 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಮಂಗಳೂರು, ಉಡುಪಿ, ಹುಬ್ಬಳ್ಳಿ, ಮೈಸೂರು ಮತ್ತು ಗೋವಾ ರಾಜಧಾನಿ ಪಣಜಿಯಲ್ಲಿ ಈ ದಾಳಿ ನಡೆಸಲಾಗಿದೆ. ಫೆಬ್ರವರಿ 8 ರಿಂದ 12 ರ ವರೆಗೆ 150 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಮೀನು ಸಂಸ್ಕರಣಾ ಘಟಕಗಳ ಮಾಲೀಕರು ಸಾಲದ ಲೆಕ್ಕ ತೋರಿಸಿ ಭಾರಿ ಪ್ರಮಾಣದ ತೆರಿಗೆ ಹಣವನ್ನು ವಂಚಿಸಿದ್ದರು ಎಂಬ ಆರೋಪವಿತ್ತು.

ಅಲ್ಲದೇ ಸಂಸ್ಕರಣ ಘಟಕಗಳಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಿದ್ದ ಮಾಲೀಕರು ಮತ್ತು ಅಲ್ಲಿನ ಏಜೆಂಟರುಗಳು ಬೇನಾಮಿಯಾಗಿ ನೂರಾರು ಕೋಟಿ ಅಕ್ರಮ ಆಸ್ತಿ ಮಾಡಿದ್ದರು ಎಂದು ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಳಿಯ ವೇಳೆ 88 ಲಕ್ಷ ನಗದು ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 125 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ ಹಚ್ಚಲಾಗಿದ್ದು, ಅಕ್ರಮವೆಸಗಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ನಡೆದಿರುವುದೂ ಕೂಡ ಪತ್ತೆಯಾಗಿದ್ದು, ಈ ಬಗ್ಗೆ ಮುಂದಿನ ತನಿಖೆಯನ್ನು ಜಾರಿ ನಿರ್ದೇಶನಾಲಯಕ್ಕೆ ಐಟಿ ಅಧಿಕಾರಿಗಳು ಸೂಚಿಸುವ ಸಾಧ್ಯತೆ ಇದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)