ಮನುಷ್ಯ ಪ್ರಕೃತಿಯಿಂದ ಬೇರಾಗಿ ಬದುಕುಲು ಅಸಾಧ್ಯ : ಕೆ. ಪ್ರಕಾಶ್

0
676

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮನುಷ್ಯ ಪ್ರಕೃತಿಯಿಂದ ಬೇರಾಗಿ ಬದುಕುಲು ಅಸಾಧ್ಯ. ಅದು ಮನುಷ್ಯನ ಜೀವನದ ಅವಿಭಾಜ್ಯ ಅಂಗ. ಆದರೆ ಅದರ ಮೇಲೆ ಮನುಷ್ಯ ನಡೆಸುತ್ತಿರುವ ದಾಳಿ ಒಂದು ವಿರೋಧಾಭಾಸ ಎಂದು ಉಡುಪಿಯ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೆ. ಪ್ರಕಾಶ್ ಹೇಳಿದರು.
ಮನುಷ್ಯ ಪ್ರಕೃತಿಯ ಮೇಲೆ ಹಲವು ವಿಧದಲ್ಲಿ ಅತ್ಯಾಚಾರ ನಡೆಸುತ್ತಿದ್ದಾನೆ. ಇದು ಅಚಿತಿಮವಾಗಿ ಅವನ ಅವನತಿಗೆ ದಾರಿ ಮಾಡಿಕೊಡಲಿದೆ. ಹೀಗಾಗಿ ಪ್ರಕೃತಿಯ ಸಂರಕ್ಷಣೆ ಮಾಡುವುದರ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಮುಂದಿನ ತಲೆಮಾರಿಗೆ ಈ ವಿಚಾರವನ್ನು ದಾಟಿಸಬೇಕಾದರೆ ಶಾಲಾ ಪಠ್ಯಪುಸ್ತಕಗಳಲ್ಲಿ ಪ್ರಕೃತಿ, ಪರಿಸರಗಳ ಮಹತ್ವ, ಅವುಗಳೊಂದಿಗೆ ಇರುವ ಅವಿನಾಭಾವ ಸಂಬಂಧವನ್ನು, ಅವುಗಳನ್ನು ಸಂರಕ್ಷಿಸಬೇಕಾದ ಅಗತ್ಯವನ್ನು ಅಳವಡಿಸಿ, ಬೋಧಿಸಬೇಕಾಗಿದೆ ಎಂದು ಅವರು ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತ್ರಾಸಿ ಕೊಂಕಣಿ ಖಾರ್ವಿ ಭವನದಲ್ಲಿ ಮಂಗಳವಾರ ಜರಗಿದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭೂಮಿಯಲ್ಲಿ ಅಂತರ್ಜಲಮಟ್ಟ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ನೀರಿನ ಸಮಸ್ಯೆ ಕಾಡುತ್ತಿದೆ. ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಬೇಕು. ಅಂತರ್ಜಲಮಟ್ಟ ಹೆಚ್ಚಿಸಲು ಇಂಗು ಗುಂಡಿಗಳನ್ನು ರಚಿಸಿ ನೀರನ್ನು ರಕ್ಷಿಸಬೇಕು. ನದಿ ಹಾಗೂ ಸಮುದ್ರಕ್ಕೆ ತ್ಯಾಜ್ಯ ಹಾಕಿ ನೀರನ್ನು ಕಲುಷಿತ ಗೊಳಿಸಬಾರದು. ಹೆಚ್ಚುತ್ತಿರುವ ಜನಸಂಖ್ಯೆಯಿಂದ ಕೂಡ ಪರಿಸರ ವಿನಾಶ ಸಾಧ್ಯತೆ ಇದೆ. ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ಕಡಿಮೆ ಮಾಡಬೇಕು. ಒಟ್ಟಿನಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜನರು ಹೆಚ್ಚು ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಅನುರಾಧಾ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶ ಡಿ. ಪಿ. ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪಾಧ್ಯಕ್ಷೆ ಗುಣರತ್ನಾ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಒ. ಆರ್. ಪ್ರಕಾಶ್, ಸಹಾಯಕ ಯೋಜನಾಧಿಕಾರಿ ಚಂದ್ರ ನಾಯ್ಕ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಇತರರು ಇದ್ದರು.

ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಮತ್ತು ಪರಿಸರ ಅಭಿಯಂತರ ಶ್ರೀನಾಥ ಆನೇಕಲ್ ಪ್ಲಾಸ್ಟಿಕ್ ಮಾಲಿನ್ಯ ಮತ್ತು ಸಮುದ್ರ ಮಾಲಿನ್ಯ ಕುರಿತು ಮಾಹಿತಿ ನೀಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ರಚನೆ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಉಡುಪಿ ಜಿಲ್ಲಾ ಪರಿಸರ ಇಲಾಖೆಯ ಸಹಾಯಕ ಅಧಿಕಾರಿ ಪ್ರಮೀಳಾ ಸ್ವಾಗತಿಸಿದರು. ಜಿಲ್ಲಾ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮೀಕಾಂತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೃಷ್ಣಮೂರ್ತಿ ನಾವಡ ಕಾರ್ಯಕ್ರಮ ನಿರೂಪಿಸಿದರು. ತ್ರಾಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೋಭಾ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)