ಗೋವಾ ಮುಖ್ಯಮಂತ್ರಿಯಾಗಿ ಪರ್ಸೇಕರ್ ಪ್ರತಿಜ್ಞಾವಿಧಿ ಸ್ವೀಕಾರ

0
397

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಪಣಜಿ: ಗೋವಾ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

goa-cm-parsekar

ಗೋವಾ ರಾಜ್ಯಪಾಲರಾದ ಮೃದಲಾ ಸಿಂಹಾ ಅವರು ಲಕ್ಷ್ಮೀಕಾಂತ್ ಪರ್ಸೇಕರ್ ಅವರಿಗೆ ಪ್ರತಿಜ್ಞಾ ವಿಧಿ ಭೋದಿಸಿದ್ದಾರೆ. ಗೋವಾ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗೋವಾ ಸಚಿವರು ಮತ್ತು ಕೆಲ ಪ್ರತಿಪಕ್ಷ ನಾಯಕರು ಹಾಜರಿದ್ದರು ಎಂದು ತಿಳಿದುಬಂದಿದೆ.
ಮೂಲತಃ ಆರ್‌ಎಸ್‌ಎಸ್ ಹಿನ್ನಲೆಯುಳ್ಳ ಪರ್ಸೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸ್ಸಿನಂತೆ ಸಿ‌ಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಪರಿಕ್ಕರ್ ಸಂಪುಟದಲ್ಲಿ ಆರೋಗ್ಯ ಸಚಿವರಾಗಿದ್ದ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಮನೋಹರ್ ಪರಿಕ್ಕರ್ ಅವರಿಗೆ ತುಂಬಾ ಆಪ್ತರಾಗಿದ್ದರು. ಹೀಗಾಗಿಯೇ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದುಬಂದಿದೆ ಎಂದು ಹೇಳಲಾಗುತ್ತಿದೆ.

ಇನ್ನು ಈ ಹಿಂದೆ ಗೋವಾ ನೂತನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಪರ್ಸೇಕರ್ ಅವರ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಫ್ರಾನ್ಸಿಸ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು. ಆದರೆ ಅಂತಿಮ ಕ್ಷಣದಲ್ಲಿ ನಡೆದ ಕಸರತ್ತಿನ ಫಲವಾಗಿ ಸ್ವತಃ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ಲಕ್ಷ್ಮೀಕಾಂತ್ ಪರ್ಸೇಕರ್ ಅವರ ಹೆಸರನ್ನು ಸೂಚಿಸುವ ಮೂಲಕ ಅಚ್ಚರಿಗೆ ಕಾರಣವಾದರು.
ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ ಪರಿಕ್ಕರ್ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ನಾಳೆ ಸಂಜೆ 4 ಗಂಟೆಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪರಿಕ್ಕರ್ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)